“ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ”

Estimated read time 1 min read
Share with Your friends

ಪಶುವೈದ್ಯಕೀಯ ಮಹಾವಿದ್ಯಾಲಯ‌ ಲೋಕಾರ್ಪಣೆ

ವರದಿ : ಮಿಯಾಲಾಲ ಕಿಲ್ಲೇದಾರ

ಬೆಳಗಾವಿ :–

ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ

ಬೆಳಗಾವಿ, ಆ.11(ಕರ್ನಾಟಕ ವಾರ್ತೆ): ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ನಡೆದ ಸಮಾರಂಭದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆಗೊಳಿಸಿ ವಿವಿಧ ಅಭಿವೃದ್ಧಿ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರಕಾರದ‌ ಆದಾಯ ಕೂಡ ಹೆಚ್ಚಾಗಲಿದೆ.
ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ದೇಶದಲ್ಲೇ ಅಪರೂಪದ ಯೋಜನೆಯಾಗಿದೆ.‌ ವರ್ಷಕ್ಕೆ 35 ಸಾವಿರ ಕೋಟಿ ರೂಪಾಯಿ ಇದಕ್ಕೆ ವಿನಿಯೋಗಿಸಲಾಗುವುದು ಎಂದರು.

ಗ್ಯಾರಂಟಿ ಅನುಷ್ಠಾನ ಸೇರಿದಂತೆ ಸರಕಾರದ‌ ಸಾಧನೆಯು ವಿರೋಧ ಪಕ್ಷವನ್ನು ಕಂಗೆಡಿಸಿದೆ.‌ ಏನೇ ಆದರೂ ಸರಕಾರ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚುನಾವಣಾ ಸಂದರ್ಭದಲ್ಲಿ ನೀಡಲಾದ ಪ್ರತಿಯೊಂದು ಭರವಸೆಗಳನ್ನು ಸರಕಾರ ಈಡೇರಿಸಲಿದೆ. ನುಡಿದಂತೆ ನಡೆಯುವ ಸರಕಾರ ನಮ್ಮದು ಎಂದರು.

ಕಳೆದ ಬಾರಿ 165 ಭರವಸೆಗಳ ಪೈಕಿ 158 ಈಡೇರಿಸಲಾಗಿದೆ. ಅದೇ ರೀತಿ ಈ ಸಲ ನೀಡಲಾಗಿರುವ ಐದು ಗ್ಯಾರಂಟಿ
ಇತ್ತೀಚಿನ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಲಾದ 76 ಭರವಸೆಗಳನ್ನು ಈಡೇರಿಸಲು ಪ್ರಸಕ್ತ ಸಾಲಿನ ಬಜೆಟ್ ನಲ್ಲಿಯೇ ಕ್ರಮ ಕೈಗೊಳ್ಳಲಾಗಿದೆ.

ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ. ಗೃಹಲಕ್ಷ್ಮೀ ಈ ಮಾಹೆಯಲ್ಲಿ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೊಳಿಸಲಾಗುವುದು.

ಪ್ರಮುಖ ಸಮಾಜ ಸುಧಾರಕರ ಪೈಕಿ ಬಸವಣ್ಣ ನನಗೆ ಅತ್ಯಂತ ಇಷ್ಟವಾದ ವ್ಯಕ್ತಿ. ಆದ್ದರಿಂದ ಬಸವ ಜಯಂತಿಯ ದಿನ ಪ್ರಮಾಣವಚನ ಸ್ವೀಕರಿಸಿ ನುಡಿದಂತೆ ನಡೆದಿರುತ್ತೇವೆ. ಆದ್ದರಿಂದ ಜನರು ಮತ್ತೇ ಆಶೀರ್ವಾದ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಪಶು ಸಂಪತ್ತು ಅಧಿಕವಾಗಿದ್ದು, ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಿಂದ ಜಾನುವಾರುಗಳ ಆರೋಗ್ಯ ರಕ್ಷಣೆಯ ಜತೆಗೆ ಕೃಷಿ ಅಭಿವೃದ್ಧಿಗೆ ಪೂರಕವಾಗಲಿದೆ.

ಅಥಣಿ ಮತಕ್ಷೇತ್ರಕ್ಕೆ ಶಾಸಕ ಲಕ್ಷ್ಮಣ ಸವದಿ ಅವರು ಕೊಡುಗೆ ಅಪಾರವಾಗಿದೆ. ಆಯಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸವದಿ ಅವರ ಸಾಧನೆ ಅಭಿನಂದನಾರ್ಹ.
ನೀರಾವರಿ ಯೋಜನೆ ಅನುಷ್ಠಾನ ಸೇರಿದಂತೆ ಎಲ್ಲಾ ಬೇಡಿಕೆ ಹಂತ ಹಂತವಾಗಿ ಈಡೇರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸಮಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ಅಥಣಿ ಶಾಸಕರ ನೀರಾವರಿ ಯೋಜನೆಗಳ ಕನಸು ದೊಡ್ಡದಾಗಿವೆ. ಇಡೀ ಕ್ಷೇತ್ರದ ಜನರ ಬದುಕು ಹಸನಾಗಿಸಲು ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅವರು ‌ಬಯಸಿದ್ದಾರೆ.
ಈ ಭಾಗದ ಜನರು ಮಾತ್ರವಲ್ಲ; ಜಾನುವಾರುಗಳ ಅನುಕೂಲಕ್ಕಾಗಿ ಪಶು ವೈದ್ಯಕೀಯ ಮಹಾವಿದ್ಯಾಲಯವನ್ನು ಶಾಸಕ ಲಕ್ಷ್ಮಣ ಸವದಿ ಸ್ಥಾಪಿಸುವ ಮೂಲಕ ತಮ್ಮ ಕಳಕಳಿಯನ್ನು ಪ್ರದರ್ಶಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸರಕಾರ ನುಡಿದಂತೆ ನಡೆಯುತ್ತಿದ್ದು, ಐದೂ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲಾಗುವುದು ಎಂದು ಹೇಳಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಾತನಾಡಿ, ಲೋಕಾರ್ಪಣೆಗೊಂಡಿರುವ ಪಶು ವೈದ್ಯಕೀಯ ಮಹಾವಿದ್ಯಾಲಯವು ಮುಂಬರುವ ದಿನಗಳಲ್ಲಿ ರೈತ ಸಮುದಾಯ, ವಿದ್ಯಾರ್ಥಿಗಳು ಹಾಗೂ ಈ ಭಾಗದ ಜಾನುವಾರುಗಳಿಗೆ ಅನುಕೂಲವಾಗಲಿದೆ ಎಂದರು.
ಮಹಾವಿದ್ಯಾಲಯಕ್ಕೆ ಅಗತ್ಯ ಮೂಲಸೌಕರ್ಯವನ್ನು ಒದಗಿಸಲಾಗುವುದು. ಅಥಣಿ ಭಾಗದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನವನ್ನು ಸರಕಾರ ನೀಡಲಿದೆ.
ಮುಖ್ಯಮಂತ್ರಿ ‌ಸಿದ್ದರಾಮಯ್ಯನವರ ಹಿಂದಿನ ಆಡಳಿತ ಅವಧಿಯಲ್ಲಿನ ಅಭಿವೃದ್ಧಿ ಪಥದಲ್ಲಿ ಹೊಸ ಸರಕಾರ ಸಾಗಲಿದೆ ಎಂದು ಹೇಳಿದರು.

ನಾಲ್ಕು ಟಿ.ಎಂ.ಸಿ. ನೀರು ವಿನಿಮಯ ಒಪ್ಪಂದಕ್ಕೆ ಜಾರಕಿಹೊಳಿ ಮನವಿ:

ಮಹಾರಾಷ್ಟಕ್ಕೆ ಮಳೆಗಾಲದಲ್ಲಿ ನಾಲ್ಕು ಟಿ.ಎಂ.ಸಿ.‌ನೀಡಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ನಾಲ್ಕು ಟಿ.ಎಂ.ಸಿ. ನೀರು ವಿನಿಮಯ ಮಾಡಿಕೊಳ್ಳುವ ಒಪ್ಪಂದಕ್ಕೆ ಸರಕಾರ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡರು.
ಈ ರೀತಿಯ ಒಪ್ಪಂದದಿಂದ ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ಅವರು‌ ಮಾತನಾಡಿ, ಈ ಭಾಗದ ವಿದ್ಯಾರ್ಥಿಗಳು ಮತ್ತು ಜಾನುವಾರುಗಳನ್ನು ಸಾಕಿಕೊಂಡಿರುವ ರೈತ ಸಮುದಾಯಕ್ಕೆ ಪಶು ವೈದ್ಯಕೀಯ ಮಹಾವಿದ್ಯಾಲಯವು ಅನುಕೂಲವಾಗಲಿದೆ ಎಂದು ಹೇಳಿದರು.
ವೈದ್ಯರು, ಔಷಧಿಗಳ ಕೊರತೆಯ ಮಧ್ಯೆಯೂ ಪಶುಸಂಗೋಪನೆ ಇಲಾಖೆಯ ಉತ್ತಮ ಸೇವೆ ಒದಗಿಸುತ್ತಿದೆ ಎಂದು ಸಚಿವ ವೆಂಕಟೇಶ್ ತಿಳಿಸಿದರು.
ರಾಜ್ಯದಲ್ಲಿಯೇ ಅತೀ ಹೆಚ್ಚು ಜಾನುವಾರುಗಳು ಇರುವ ಬೆಳಗಾವಿ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಇದನ್ನು ಪರಿಗಣಿಸಿ ಇನ್ನಷ್ಟು ಉತ್ತಮ ಸೇವೆ ಒದಗಿಸಲು ಬದ್ಧವಿರುವುದಾಗಿ ಅವರು ಭರವಸೆ ನೀಡಿದರು.

ಇದೇ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅಥಣಿ ಕ್ಷೇತ್ರದ ಅಭಿವೃದ್ಧಿಯಾಗಬೇಕು ಎಂಬುದು ಶಾಸಕ ಲಕ್ಷ್ಮಣ ಸವದಿ ಅವರ ಏಕೈಕ ಬೇಡಿಕೆಯಾಗಿದೆ ಎಂದರು.
ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಮೂರು ಗ್ಯಾರಂಟಿ ಅನುಷ್ಠಾನಗೊಳಿಸಲಾಗಿದ್ದು, ಇದೇ ತಿಂಗಳಿನಲ್ಲಿ ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು. ಬೆಳಗಾವಿಯಲ್ಲಿ 11 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರಕಲಿದೆ ಎಂದು ಹೆಬ್ಬಾಳಕರ್ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಹೇಳಿದರು.

70 ಸಾವಿರ ಎಕರೆ ನೀರಾವರಿ ಸೌಲಭ್ಯಕ್ಕೆ ಮನವಿ:

ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು.

70 ಸಾವಿರ ಎಕರೆ ಜಮೀನು ಇನ್ನೂ ನೀರಾವರಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ ರೀತಿ ಒಂಬತ್ತು ಹಳ್ಳಿಗಳು ಮತ್ತು ಜಮೀನು ಸವಳು-ಜವಳು ಸಮಸ್ಯೆಯಿಂದ ಬಾಧಿತಗೊಂಡಿರುತ್ತವೆ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು.

ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ತಕ್ಷಣಕ್ಕೆ 20 ಕೋಟಿ ಒದಗಿಸಬೇಕು. ಅಥಣಿ ಭಾಗದ ಒಣ ದ್ರಾಕ್ಷಿಯನ್ನು ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೌಷ್ಟಿಕಾಹಾರ ತಯಾರಿಕೆಗೆ ಖರೀದಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಲಕ್ಷ್ಮಣ ಸವದಿ ವಿನಂತಿಸಿದರು.

ಕಾಗವಾಡ ಶಾಸಕ ಭರಮಗೌಡ ಕಾಗೆ ಮಾತನಾಡಿ, ನೂತನ ಕಾಗವಾಡ ತಾಲ್ಲೂಕಿಗೆ ಸರಕಾರಿ ಕಚೇರಿಗಳು ಸೇರಿದಂತೆ ಎಲ್ಲ ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಕಾಗವಾಡ ತಾಲ್ಲೂಕಿನ ಎರಡು ಹೋಬಳಿಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.
ಏತ‌ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕು; 2015 ವರೆಗಿನ ಖಾಸಗಿ ಶಾಲೆಗಳನ್ನು ಅನುದಾನಕ್ಕೊಳಪಡಿಸಬೇಕು; ಸೌಲಭ್ಯಗಳಿಂದ ವಂಚಿತಗೊಂಡಿರುವ ಗಡಿಭಾಗದ ಅಥಣಿ ಹಾಗೂ ಕಾಗವಾಡ ಕ್ಷೇತ್ರಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು ಎಂದು ಭರಮಗೌಡ ಕಾಗೆ ಅವರು ಕ್ಷೇತ್ರದ ಜನರ ಪರವಾಗಿ ವಿನಂತಿಸಿದರು.

ಅಥಣಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ:

ಇದಕ್ಕೂ ಮುಂಚೆ ಅಥಣಿಯ ಬಸವೇಶ್ವರ ವೃತ್ತದಲ್ಲಿ ಸ್ಥಾಪಿಸಲಾಗಿರುವ ಜಗಜ್ಯೋತಿ ಶ್ರೀ ಬಸವೇಶ್ವರರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾವರಣಗೊಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಸರಕಾರದ ವಿಧಾನಸಭೆ ಮುಖ್ಯ ಸಚೇತಕರಾದ ಅಶೋಕ‌ ಪಟ್ಟಣ, ಶಾಸಕರಾದ ಭರಮಗೌಡ ಕಾಗೆ, ವಿಶ್ವಾಸ ವೈದ್ಯ, ಜೆ.ಟಿ.ಪಾಟೀಲ, ಮಹೇಂದ್ರ ತಮ್ಮಣ್ಣವರ, ಬಾಬಾಸಾಹೇಬ್ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ, ಚನ್ನರಾಜ್ ಹಟ್ಟಿಹೊಳಿ, ಕೊಕಟನೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಪೂಜಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ವಾಗತಿಸಿದರು. ಬೀದರ್ ನ ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ ವಂದಿಸಿದರು.
ಕೊಕಟನೂರ‌ ಗ್ರಾಮ ಸೇರಿದಂತೆ ಅಥಣಿ ಮತಕ್ಷೇತ್ರದ ಸಾವಿರಾರು ಜನರು ಸಮಾರಂಭದಲ್ಲಿ ‌ಪಾಲ್ಗೊಂಡಿದ್ದರು.



Share with Your friends

You May Also Like

More From Author

+ There are no comments

Add yours