ಬೆಂಗಳೂರು :–
ರಾಜ್ಯ ಸರಕಾರದ ಎಲ್ಲ ಇಲಾಖೆಗಳ ಎಲ್ಲ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ಮಾರ್ಗಸೂಚಿಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಮೇ 15ರಿಂದ ಜೂ.16ರ ವರೆಗೆ ಸರಕಾರಿ ನೌಕರರ ವರ್ಗಾವಣೆ “ಸುಗ್ಗಿ’ ಆರಂಭವಾಗಲಿದೆ.
ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವರ್ಷದ ಸಾಮಾನ್ಯ ವರ್ಗಾವಣೆ ಮಾರ್ಗಸೂಚಿಗೆ ಒಪ್ಪಿಗೆ ನೀಡಲಾಗಿದೆ.
ಈ ವರ್ಷದಿಂದ ಅಬಕಾರಿ ಇಲಾಖೆಯಲ್ಲಿ ಕೌನ್ಸೆಲಿಂಗ್ ಆಧಾರದ ಮೇಲೆ ವರ್ಗಾವಣೆ ಪ್ರಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ಎಲ್ಲ ಇಲಾಖೆಗಳಲ್ಲಿ ವರ್ಗಾವಣೆ ನಡೆಸಲಾಗುತ್ತದೆ. ಗ್ರೂಪ್ ಎ ಮತ್ತು ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಪಟ್ಟಂತೆ ಆಯಾ ಇಲಾಖೆ ಸಚಿವರಿಗೆ, ಗ್ರೂಪ್ ಸಿ ಮತ್ತು ಡಿ ವೃಂದದ ಸಿಬಂದಿ ವರ್ಗಾವಣೆ ಅಧಿಕಾರವನ್ನು
ಆಯಾ ನೇಮಕ ಪ್ರಾಧಿಕಾರಕ್ಕೆ ಬಿಡಲಾಗಿದೆ. ಮಾರ್ಗಸೂಚಿ ಪರಿಷ್ಕರಣೆ ಹಾಗೂ ವರ್ಗಾವಣೆ ಅವಧಿಯನ್ನು ವಿಸ್ತರಿಸುವ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಡಲು ಸಂಪುಟ ಸಭೆ ನಿರ್ಧರಿಸಿದೆ.